2026-03-07 01:11:37

Shivamogga student murder | ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಆರೋಪಿಗಳಿಗೆ ತಕ್ಕ ಶಿಕ್ಷೆ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

Shivamogga student murder | ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಆರೋಪಿಗಳಿಗೆ ತಕ್ಕ ಶಿಕ್ಷೆ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ. 
ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. 
ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ದಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು, ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ದಿ ಹೇಳಬೇಕು. 
ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು.
ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ.
ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಶಾಂತಿ - ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.