ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಬಳಿಕ ರುಂಡವನ್ನೇ ಕತ್ತರಿಸಿ, ಅದನ್ನು ಕ್ರಿಕೆಟ್ ಗ್ರೌಂಡ್‌ನಲ್ಲಿ ಇಟ್ಟು ಹೋಗಿರುವ ಶಾಕಿಂಗ್ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡತಿ ಗೇಟ್ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಬರ್ಬರ ಕೊಲೆ ಮಾಡಿದ್ದು, ಬಳಿಕ ಆತನ ತಲೆಯನ್ನು ಕತ್ತರಿಸಿ ಸಮೀಪದ ಕ್ರಿಕೆಟ್ ಮೈದಾನದಲ್ಲಿಟ್ಟು ಪರಾರಿಯಾಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರಲ್ಲಿ ತೀವ್ರ ಭಯ ಮತ್ತು ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಘಟನೆಯ ಸುಳಿವು ಸಿಗುತ್ತಿದ್ದಂತೆ ವರ್ತೂರು ಠಾಣೆಯ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಹಾಗೂ ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ. ಪ್ರಸ್ತುತ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಕೋನದಲ್ಲೂ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.