2026-03-07 05:14:24

Siddaramaiah used to herd sheep and became CM | ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಕಣ್ಣು ಕೆಂಪಾಗಲು ಕಾರಣ ಸಿಎಂ ಸಿದ್ದರಾಮಯ್ಯ | Speed News Kannada

Siddaramaiah used to herd sheep and became CM | ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಕಣ್ಣು ಕೆಂಪಾಗಲು ಕಾರಣ ಸಿಎಂ ಸಿದ್ದರಾಮಯ್ಯ | Speed News Kannada

ಬೆಂಗಳೂರು: ನನ್ನ ಉಸಿರು ಇರುವವರೆಗೆ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು - ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ.
ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು ಎಂದಿದ್ದಾರೆ.
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಕಣ್ಣು ಕೆಂಪಾಗಲು ಕಾರಣ: 
ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ.
ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.