2026-05-01 05:33:49

State government bankrupt | ರಾಜ್ಯ ಸರ್ಕಾರ ದಿವಾಳಿ ಕುಸಿದುಬಿದ್ದ ಆಡಳಿತ ಯಂತ್ರ ಬಿ ವೈ ವಿಜಯೇಂದ್ರ ವಾಗ್ದಾಳಿ | Speed News Kannada

State government bankrupt | ರಾಜ್ಯ ಸರ್ಕಾರ ದಿವಾಳಿ ಕುಸಿದುಬಿದ್ದ ಆಡಳಿತ ಯಂತ್ರ ಬಿ ವೈ ವಿಜಯೇಂದ್ರ ವಾಗ್ದಾಳಿ | Speed News Kannada

ಬೆಂಗಳೂರು: ನೌಕರರ ವೇತನಕ್ಕೂ ಹಣ ನೀಡಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದೆ. ಭ್ರಷ್ಟಾಚಾರ ಮಿತಿಮೀರಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. 
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹಣ ನೀಡದೆ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದರಲ್ಲಿ ತೊಡಗಿದೆ. ಆಡಳಿತ ಪಕ್ಷದ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ದಿನೇ ದಿನೇ ಪೈಪೋಟಿ ಹೆಚ್ಚಾಗಿದೆ. ಆಡಳಿತ ಪಕ್ಷದ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಒಮ್ಮೆ ಡಿ.ಕೆ.ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹೋದರೆ ಮತ್ತೊಮ್ಮೆ ಸಿದ್ದರಾಮಯ್ಯ ಅವರ ಬೆಂಬಲಿಗರು ದೆಹಲಿಯಲ್ಲಿ ಬೀಡು ಬಿಡುತ್ತಾರೆ. ಇವರೇನು ನಮ್ಮ ರಾಜ್ಯದ ಶಾಸಕರೋ ಅಥವಾ ದೆಹಲಿ ಶಾಸಕರೋ ಎಂಬ ಅನುಮಾನ ಬರುತ್ತಿದೆ ಎಂದರು. 
ಕೀಳುಮಟ್ಟಕ್ಕೆ ಪೊಲೀಸ್ ಇಲಾಖೆ:
ಧಾರವಾಡದಲ್ಲಿ ಆದಿತ್ಯ ಮ್ಯಾಗೇರಿ ಎಂಬ ಕಾಲೇಜಿಗೆ ಹೋಗುವ ಯುವಕನನ್ನು ಪೊಲೀಸ್ ಇಲಾಖೆಯವರು ಡ್ರಗ್ಸ್ ಪ್ರಕರಣನಲ್ಲಿ ವಿನಾಕಾರಣ ಸಿಲುಕಿಸಿದರು. ಅವನು ನಿರಪರಾಧಿ ಎಂದು ಗೊತ್ತಾದ ನಂತರವೂ ತಂದೆ ಇಲ್ಲದೆ ಇರುವ ಆತನ ತಾಯಿ ಪೀಡಿಸಿ ಸಾವಿರಾರು ರೂಪಾಯಿ ವಸೂಲಿ ಮಾಡಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಇಷ್ಟೊಂದು ಕೀಳುಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಗೊತ್ತಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಗೌರವ ಇದ್ದರೆ ಈ ಘಟನೆಯಿಂದ ಎಚ್ಚೆತ್ತುಕೊಂಡು ಈ ಪ್ರಕರಣದ ಹಿಂದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಬಡ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು. 
ಹಿಂದೂಗಳು ಮತ ಹಾಕಿಲ್ವ?:
ಇತ್ತೀಚೆಗೆ ನಡೆದ ಸಚಿವ ಸಂಪುಟದ ಸಭೆ ಅಲ್ಪಸಂಖ್ಯಾತರಿಗೆ ಮತ್ತೆ 650 ಕೋಟಿ ರೂ. ನೀಡಲು ತೀರ್ಮಾನ ಕೈಗೊಂಡಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಆದರೆ ಈ ಸರ್ಕಾರ ಮಾತ್ರ ಪದೇ ಪದೇ ಅಲ್ಪಸಂಖ್ಯಾತರನ್ನು ಓಲೈಸಲು ಹಣ ನೀಡುತ್ತಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂಗಳು ಮತ ಹಾಕಿಲ್ಲವೇ ಎಂದು ಪ್ರಶ್ನಿಸಿದರು. 
ಹಿಂದೂಗಳಿಗೆ ಮುಖ್ಯಮಂತ್ರಿಗಳು ಅಪಮಾನ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಈ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರವನ್ನು ಪದೇ ಪದೇ ಕೈಗೊಳ್ಳುತ್ತಿರುವ ಈ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಹಿಂದೂಗಳಿಗೆ ಅಪಮಾನ ಸಲ್ಲದು ಎಂದರು. 
ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದು ಬಿಟ್ಟರೆ ಏನು ಮಾಡಿಲ್ಲ. ಜಲಜೀವನ್ ಮಿಷನ್ ಸೇರಿ ಬೇರೆ ಬೇರೆ ಯೋಜನೆಗಳಿಗೆ ಕೇಂದ್ರದಿಂದ ಏನು ಹಣ ಬರಬೇಕೊ ಅದು ಬರುತ್ತೆ. ಅಭಿವೃದ್ಧಿ ಯೋಜನೆಗೆ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ರೂ. 25 ಕೋಟಿ ಕೊಡ್ತೇವೆ ಅಂತ ಹೇಳಿ ಆರು ತಿಂಗಳು ಆಯಿತು. ಶಾಸಕರು ಯೋಜನೆ ರೂಪಿಸಿಕೊಂಡು ಕಾಯುತ್ತಾ ಇದ್ದಾರೆ. ಆದರೆ ಸರ್ಕಾರ ಹಣವನ್ನು ಈವರೆಗೆ ನೀಡಿಲ್ಲ ಎಂದು ಆರೋಪಿಸಿದರು. 
ನಂತರ ಅವರು, ಬೆಂಗಳೂರಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ "ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ" ಕಾರ್ಯಕ್ರಮಕ್ಕೆ ಆಮಂತ್ರಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.