ಹಿಮಾಚಲ ಪ್ರದೇಶದಲ್ಲಿ ಮಾನವೀಯತೆಯನ್ನೇ ಕಳಂಕಿತಗೊಳಿಸುವ ಪೈಶಾಚಿಕ ಘಟನೆ ನಡೆದಿದೆ. ಕಾಲೇಜಿಗೆ ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯನ್ನು ನಡುರಸ್ತೆಯಲ್ಲೇ ಶಿರಚ್ಛೇದ ಮಾಡಿ ಹತ್ಯೆ ಮಾಡಿರುವ ಭೀಕರ ಘಟನೆ ಮಂಡಿ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.ಹೌದು, ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸುಮಾರು 9.15ರ ವೇಳೆಗೆ ಈ ಭೀಕರ ಘಟನೆ ನಡೆದಿದೆ. ಎಂದಿನಂತೆ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ಏಕಾಏಕಿ ದಾಳಿ ನಡೆಸಿದ್ದಾರೆ.
ಕ್ರೌರ್ಯದ ಮಿತಿಯನ್ನೇ ಮೀರಿ, ದುಷ್ಕರ್ಮಿಗಳು ಯುವತಿಯ ಶಿರಚ್ಛೇದ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ರಸ್ತೆಯ ಮಧ್ಯೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷವೇ ಅಥವಾ ಪ್ರೇಮ ಸಂಬಂಧದ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನೆಯಿಂದ ಇಡೀ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನರಲ್ಲಿ ಭೀತಿ ಮತ್ತು ಆಕ್ರೋಶ ಹೆಚ್ಚಾಗಿದೆ.ನಡುರಸ್ತೆಯಲ್ಲಿ, ಅದೂ ಹಗಲು ಹೊತ್ತಿನಲ್ಲಿ ನಡೆದ ಈ ಪೈಶಾಚಿಕ ಕೃತ್ಯ ದೇಶವನ್ನೇ ಬೆಚ್ಚಿಬೀಳಿಸಿದೆ. ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.