ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಿರುದ್ಧ ಕೇಳಿ ಬಂದಿರುವ ಆರೋಪಗಳ ತನಿಖೆಗೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ವಿಷಯವನ್ನು ತುಂಬಾ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ. ಎಂದು ಅರ್ಜಿದಾರರ ಪರ ಹಾಜರಿದ್ದ ವಕೀಲ ಎನ್.ಕೆ. ಗೋಸ್ವಾಮಿ ಅವರಿಗೆ ತಿಳಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿರುವ ಕಾಕ್ರೋಚ್ ಜನತಾ ಪಾರ್ಟಿಯ ಚಟುವಟಿಕೆಗಳ ಸಂಬಂಧಿಸಿದ ಆರೋಪಗಳ ತನಿಖೆಯನ್ನು ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಸಿಜೆಪಿ ದುರುದ್ದೇಶವನ್ನು ಹೊಂದಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ. ಆದರೆ ಅಂತಹ ಗಂಭೀರ ತುರ್ತು ಪರಿಸ್ಥಿತಿ ಈಗ ಉದ್ಭವಿಸಿಲ್ಲ. ನಾವು ನೋಡುತ್ತೇವೆ ಎಂದು ಸಿಜೆಐ ತಿಳಿಸಿದರು.
ಮೇ 15ರಂದು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಸೂರ್ಯ ಕಾಂತ್ ಅವರು ನಿರುದ್ಯೋಗಿಗಳನ್ನು 'ಜಿರಳೆ'ಗಳಿಗೆ ಹೋಲಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಸಿಜೆಪಿ ಹುಟ್ಟಿಕೊಂಡಿತ್ತು. ಆದರೆ ತಮ್ಮ ಹೇಳಿಕೆಯನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟನೆ ನೀಡಿದ್ದರು.