ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ನೀಡಿ ಆದೇಶಿಸಿದೆ.
ಈ ಹಿಂದೆ ನೀಡಲಾಗಿದ್ದ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರು ಇತ್ತೀಚೆಗೆ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗಿದ್ದರು.
‘ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದ ಅಡಿಯಲ್ಲಿ ಶಾಸಕ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು’ ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿತ್ತು.ಈ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.