ಬೆಂಗಳೂರು: ವೇತನ ಹಿಂಬಾಕಿ, ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ
ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ.20ರಂದು ರಾಜ್ಯಾದ್ಯಾಂತ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ.
ಕಾರ್ಮಿಕ ಮುಖಂಡ ಎಚ್.ವಿ. ಅನಂತ್ ಸುಬ್ಬರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.
38 ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಬೇಕು, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಇಲಾಖೆಯೇ ನೌಕರರು ಮತ್ತೆ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಫೆಬ್ರವರಿ 20ರಂದು ಮುಷ್ಕರ ನಡೆದರೆ ಸಾರ್ವಜನಿಕ ಸಾರಿಗೆ ಅಸ್ತವ್ಯಸ್ತವಾಗಲಿದೆ.
ಅಂದು ಬೆಂಗಳೂರು ಚಲೋ ನಡೆಯಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಬರುವ ಸಾವಿರಾರು ಸಾರಿಗೆ ನೌಕರರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ಮಾತುಕತೆ ನಡೆಸಿತ್ತು. ಆದರೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿರಲಿಲ್ಲ. ಹೀಗಾಗಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.