ಬೆಂಗಳೂರು: ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯಲ್ಲಿ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಶಿವಾಜಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಅಮೀರ್ ಮತ್ತು ಅಮೀರ್ ಅಹಮದ್ ಬಂಧಿತ ಆರೋಪಿಗಳು. ಬಂಧಿತರ ಪೈಕಿ ಸೈಯದ್ ಅಮೀರ್ ಸಚಿವ ಜಮೀರ್ ಅಹಮದ್ ಅವರ ತಾಯಿಯ ಹತ್ತಿರದ ಸಂಬಂಧಿ. ಸೈಯದ್ ಅಮೀರ್ ಜೊತೆಗೆ ಟ್ರಾವೆಲ್ಸ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ ಅಮೀರ್ ಅಹಮದ್ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇವರಿಂದ ರೂ.1.13 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಕದ್ದ ಚಿನ್ನಾಭರಣಗಳನ್ನು ಅಡವಿಟ್ಟು ಆ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸಲು ಆರೋಪಿಗಳು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.