2026-03-07 06:49:29

Union Minister Gajendra Singh Shekhawat confident | 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಶ್ವಾಸ | Speed News Kannada

Union Minister Gajendra Singh Shekhawat confident | 2028ರಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಬಹುಮತ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಶ್ವಾಸ | Speed News Kannada

ಬೆಂಗಳೂರು: ಇಂದು ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಕೇವಲ ಸಂಘಟನಾತ್ಮಕ ಸಭೆಯಲ್ಲ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪ ಸಭೆಯಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುಡುಗಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಭ್ರಷ್ಟ ಸರಕಾರವನ್ನು ಅಧಿಕಾರದಿಂದ ತೊಲಗಿಸಿ ಅಧಿಕಾರ ಮರಳಿ ಪಡೆಯುವ ಸಂಕಲ್ಪ ಸಭೆಯಾಗಿದೆ ಎಂದರು. 
ಪಕ್ಷ ಮುನ್ನಡೆಸುವ ವಿಚಾರದಲ್ಲಿ ಕರ್ನಾಟಕದಲ್ಲಿ ಯಡಿಯೂರಪ್ಪ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. 2028ರಲ್ಲಿ ಕರ್ನಾಟಕದಲ್ಲಿ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಅಧಿಕಾರ ಪಡೆಯಲಿದೆ. ಕರ್ನಾಟಕ ಭ್ರಷ್ಟ ರಾಜ್ಯವಾಗಿದೆ. ಆರ್ಥಿಕವಾಗಿ ದಿವಾಳಿಯಾಗಿದೆ ಎಂದ ಅವರು, ಮುಡಾ ಸೇರಿದಂತೆ ವಿವಿಧ ಹಗರಣಗಳನ್ನು ಪ್ರಸ್ತಾಪಿಸಿ ರಾಜ್ಯವು ಅಸಮರ್ಥ ಆಡಳಿತದ ನಾಡಾಗಿದೆ ಎಂದು ಟೀಕಿಸಿದರು. 
ಮುಖ್ಯಮಂತ್ರಿ ಪದವಿಗಾಗಿ ಆರಂಭದಲ್ಲೇ ಒಳಜಗಳ ಇತ್ತು. ಅದು ಈಗಲೂ ಮುಂದುವರೆದಿದೆ. ಇದು ಜನಾದೇಶಕ್ಕೆ ಮಾಡುತ್ತಿರುವ ಅಪಮಾನ. ಜನರು ಗ್ಯಾರಂಟಿ ಎಲ್ಲಿದೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಾಲದ ಪ್ರಮಾಣ ತೀವ್ರವಾಗಿ ಹೆಚ್ಚಾಗಿದೆ. ಹಿಂದೂಗಳಿಗೆ ಅಪಮಾನ ಮಾಡಲಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಜನರು ಇದಕ್ಕೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಹಾಗೂ ಜಿಬಿಎ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಸಂಕಲ್ಪ ನಮ್ಮದಾಗಬೇಕು. ಇದಕ್ಕಾಗಿ ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಬೇಕು. ಇದು ಪರೀಕ್ಷೆಯ ಕಾಲ; ಕಾರ್ಯಕರ್ತರು ಜನರ ಮನೆ ಮನೆಗೆ ತೆರಳಿ ಕಾಂಗ್ರೆಸ್ಸಿನ ವೈಫಲ್ಯಗಳನ್ನು ತಿಳಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಗೆಲುವು ಖಚಿತ: ರಾಧಾಮೋಹನ್ ದಾಸ್ ಅಗರ್‌ ವಾಲ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ ವಾಲ್ ಮಾತನಾಡಿ, 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದರು. 
ವಕ್ಫ್ ಅತಿಕ್ರಮಣ ವಿರುದ್ಧ ಹೋರಾಟಕ್ಕಾಗಿ ಬಿಜೆಪಿ ರಾಜ್ಯ ಘಟಕವನ್ನು ಅಭಿನಂದಿಸಿದ ಅವರು, ಪರಿಶಿಷ್ಟ ವರ್ಗದ ಬದಲಾಗಿ ಮುಸ್ಲಿಮರಿಗೆ ಹೆಚ್ಚಿನ ಸೌಕರ್ಯ ಕೊಡಲಾಗುತ್ತಿದೆ. ಇದೊಂದು ಮೊಕದ್ದಮೆಗಳ ನೇತಾರರ ಸರಕಾರ ಎಂದು ಟೀಕಿಸಿದರು.
ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ,  ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಕು.ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು ಮತ್ತು ಕಾರ್ಯಕಾರಿಣಿಯ ಅಪೇಕ್ಷಿತರು ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.