ಬೆಂಗಳೂರು: ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ನೀಡುವುದಾದರೆ ಉಗ್ರ ಹೋರಾಟಕ್ಕೆ ಇಳಿಯುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಏರಿಸಿದ್ದಾರೆ. ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ 56 ಒಳ ಮೀಸಲಾತಿ ನೀಡಿ ಬಿಜೆಪಿ ಸರಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿಗಳೇ ಪದೇಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡಬೇಡಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ನ್ಯಾಯಾಲಯದ ಕುಂಟುನೆಪ ಹೇಳದೇ ಈ ಸಮುದಾಯಗಳಿಗೆ ಉದ್ಯೋಗ ನೀಡಿ ಎಂದು ಒತ್ತಾಯಿಸಿದರು. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ತೊಟ್ಟಿಲು ತೂಗುವ ಜೊತೆಗೇ ಮಗುವನ್ನು ಚಿವುಟುವ ಕೆಲಸ ಮಾಡಬೇಡಿ. ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿ ಮಾಡಲು ಮುಂದಾಗಿರುವ ರಾಜ್ಯ ಸರಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಸಿಎಂ ಆದಿರೋ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗಳನ್ನು ಕೆಣಕದಿರಿ. ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕೆಂದು ಒತ್ತಾಯಿಸಿದರು.